ಕುಸುಗುಂಡಿ ದುರಂತಕ್ಕೆ ಸ್ಪಂದನೆ: ಶಾಸಕ ಬೇಳೂರು ಗೋಪಾಲಕೃಷ್ಣರಿಂದ ಪರಿಶೀಲನೆ
ರಿಪ್ಪನ್ ಪೇಟೆ: ಇತ್ತೀಚೆಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಸುಮಾರು 250ಕ್ಕೂ ಹೆಚ್ಚು ಅಡಿಕೆ ಮರಗಳು ಬೆಂಕಿಗೆ ಆಹುತಿಯಾದ ಘಟನೆ ನಡೆದಿರುವ ಕೋಡೂರು ಗ್ರಾಮ ಪಂಚಾಯಿತಿಯ ಕುಸುಗುಂಡಿ ಗ್ರಾಮಕ್ಕೆ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಲೂರು ಗೋಪಾಲಕೃಷ್ಣ ಅವರು ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.
ದುರಂತದಲ್ಲಿ ನಷ್ಟ ಅನುಭವಿಸಿದ ರೈತ ಚಂದ್ರಶೇಖರ್ ಬಿನ್ ಬಾಬುರಾಯ್ ಆಚಾರ್ ಅವರ ತೋಟವನ್ನು ಪರಿಶೀಲಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ರೈತನ ಕಷ್ಟ-ಸಂಕಷ್ಟಗಳನ್ನು ಆಲಿಸಿ ಧೈರ್ಯ ತುಂಬಿದರು. ಹಲವು ವರ್ಷಗಳ ಪರಿಶ್ರಮದಿಂದ ಬೆಳೆದ ಅಡಿಕೆ ತೋಟ ಬೆಂಕಿಗೆ ಆಹುತಿಯಾಗಿ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿರುವುದನ್ನು ಕಂಡು ವಿಷಾದ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ರೈತನಿಗೆ ತಮ್ಮ ವೈಯಕ್ತಿಕವಾಗಿ ಆರ್ಥಿಕ ಸಹಾಯವನ್ನು ನೀಡಿ ನೆರವಾದ ಅವರು, ಸರ್ಕಾರದ ವತಿಯಿಂದ ಸೂಕ್ತ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಜೊತೆಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಘಟನೆಯ ಬಗ್ಗೆ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಸ್ಥಳೀಯರು ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯದಿಂದ ಈ ಘಟನೆ ಸಂಭವಿಸಿದೆ ಎಂದು ಆರೋಪಿಸುತ್ತಿರುವ ಹಿನ್ನೆಲೆಯಲ್ಲಿ, ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿ ಗೌಡ, ಶಾಸಕರ ಆಪ್ತ ಸಹಾಯಕ ಸಣ್ಣಕ್ಕಿ ಮಂಜು, ಅಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.














Leave a Reply