ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ಸಿನ ಚಾಲಕ ಹಾಗೂ ನಿರ್ವಾಹಕರಿಗೆ ಗೌರವ ಸಮರ್ಪಣೆ
ರಿಪ್ಪನ್ ಪೇಟೆ: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಪ್ರೌಢಶಾಲೆ ಬೆಳ್ಳೂರಿನಲ್ಲಿ ಈ ಬಾರಿಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗಾಗಿ ಕೈಗೊಂಡ ವ್ಯವಸ್ಥೆ ಸಾರ್ವಜನಿಕರಿಂದ ಪ್ರಶಂಸೆಗೆ ಪಾತ್ರವಾಗಿದೆ.
ಪರೀಕ್ಷೆಯ ದಿನಗಳಲ್ಲಿ ವಿದ್ಯಾರ್ಥಿಗಳನ್ನು ಸರಿಯಾದ ಸಮಯಕ್ಕೆ ಪರೀಕ್ಷಾ ಕೇಂದ್ರಕ್ಕೆ ಕರೆದುಕೊಂಡು ಹೋಗುವುದು ಹಾಗೂ ಪರೀಕ್ಷೆ ಮುಗಿದ ನಂತರ ಸುರಕ್ಷಿತವಾಗಿ ಮರಳಿ ಶಾಲೆಗೆ ತಲುಪಿಸುವ ಮಹತ್ವದ ಜವಾಬ್ದಾರಿಯನ್ನು ಶಾಲೆಯ ಮುಖ್ಯ ಶಿಕ್ಷಕ ಬಿ.ಪಿ. ಸೋಮಶೇಖರ್ ಮತ್ತು ಎಸ್. ಡಿ. ಎಂ. ಸಿ ಅವರ ನೇತೃತ್ವದಲ್ಲಿ ಅತ್ಯಂತ ವ್ಯವಸ್ಥಿತವಾಗಿ ನಿರ್ವಹಿಸಲಾಯಿತು.
ವಿದ್ಯಾರ್ಥಿಗಳ ಭದ್ರತೆ ಮತ್ತು ಸಮಯಪಾಲನೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿದ ಈ ಕಾರ್ಯದಲ್ಲಿ ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಗ್ರಾಮಸ್ಥರು ಸಹಕರಿಸಿ, ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಮೊದಲಿಗಾಗಿಟ್ಟಿದ್ದರು. ಪ್ರತಿದಿನವೂ ವಿದ್ಯಾರ್ಥಿಗಳು ಯಾವುದೇ ತೊಂದರೆಯಿಲ್ಲದೆ ಪರೀಕ್ಷೆ ಬರೆಯಲು ಅನುಕೂಲ ಕಲ್ಪಿಸುವಲ್ಲಿ ಶಾಲೆಯ ಪ್ರಯತ್ನ ಶ್ಲಾಘನೀಯವಾಗಿದೆ.
ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಪೋಷಕರು ಹಾಗೂ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿ, ಈ ಸೇವೆಯನ್ನು ಗುರುತಿಸಿ ವಿದ್ಯಾರ್ಥಿಗಳನ್ನು ರಿಪ್ಪನ್ ಪೇಟೆ ಪರೀಕ್ಷೆ ಕೇಂದ್ರಕ್ಕೆ ಕರೆದುಕೊಂಡು ಹೋಗಲು ಸಹಕರಿಸಿದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ಸಿನ ಚಾಲಕ ಹಾಗೂ ನಿರ್ವಾಹಕರಿಗೆ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಶಾಲಾ ಅಭಿವೃದ್ಧಿ ಸಮಿತಿಯವರು ಗ್ರಾಮಸ್ಥರು ಗೌರವ ಸಮರ್ಪಿಸಿದರು.
ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯಾರ್ಥಿಗಳ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ಹಾಗೂ ಅವರ ಸುರಕ್ಷತೆಗೆ ಇಂತಹ ಕ್ರಮಗಳು ಮಾದರಿಯಾಗಿದ್ದು, ಇತರ ಶಾಲೆಗಳಿಗೂ ಪ್ರೇರಣೆಯಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.


















Leave a Reply