
ಹೊಸನಗರ: ಪಶ್ಚಿಮ ಬಂಗಾಳ, ಪುದುಚೇರಿ ಮತ್ತು ಅಸ್ಸಾಂ ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆ ಹೊಸನಗರ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಪಟ್ಟಣದ ಬಸ್ ನಿಲ್ದಾಣದ ಮುಂಭಾಗದಲ್ಲಿ ವಿಜಯೋತ್ಸವ ಹಮ್ಮಿಕೊಳ್ಳಲಾಗಿದ್ದು, ಪಕ್ಷದ ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ಉತ್ಸಾಹ ವ್ಯಕ್ತಪಡಿಸಿದರು.

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸಾಧನೆಗೆ ಸಂತೋಷ ವ್ಯಕ್ತಪಡಿಸಿದ ಕಾರ್ಯಕರ್ತರು “ದೀದಿ ಹೋದ್ರು, ದುರ್ಗಾ ಬಂದರು” ಎಂಬ ಘೋಷಣೆಯೊಂದಿಗೆ ಸಂಭ್ರಮಾಚರಣೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ, ದೇಶದ ಪಂಚರಾಜ್ಯಗಳ ಚುನಾವಣಾ ಫಲಿತಾಂಶಗಳು ಪ್ರಧಾನಿ ನರೇಂದ್ರ ಮೋದಿ ಹಾಗೂ ಭಾರತೀಯ ಜನತಾ ಪಕ್ಷದ ಪರವಾಗಿ ಜನರು ಸ್ಪಷ್ಟ ನಿಲುವು ವ್ಯಕ್ತಪಡಿಸಿರುವುದನ್ನು ತೋರಿಸುತ್ತಿವೆ ಎಂದರು.

ಐದು ರಾಜ್ಯಗಳಲ್ಲಿ ನಡೆದ ಚುನಾವಣೆಯಲ್ಲಿ ಎನ್ಡಿಎ ನಾಲ್ಕು ರಾಜ್ಯಗಳಲ್ಲಿ ಸರ್ಕಾರ ರಚಿಸುವ ಸ್ಥಿತಿಯಲ್ಲಿದ್ದು, ಪಶ್ಚಿಮ ಬಂಗಾಳದಲ್ಲೂ ಸರ್ಕಾರ ರಚನೆಯ ಸಾಧ್ಯತೆ ಸ್ಪಷ್ಟವಾಗಿದೆ ಎಂದು ಹೇಳಿದರು. ಅಸ್ಸೋಂನಲ್ಲಿ ಹ್ಯಾಟ್ರಿಕ್ ಜಯದೊಂದಿಗೆ ಮತ್ತೆ ಅಧಿಕಾರಕ್ಕೇರಲಿದ್ದೇವೆ. ಪುದುಚೇರಿಯಲ್ಲಿಯೂ ಎರಡನೇ ಬಾರಿ ಸರ್ಕಾರ ರಚನೆ ಮಾಡುವ ವಿಶ್ವಾಸ ವ್ಯಕ್ತಪಡಿಸಿದರು.
ಈ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಸ್ವಾಮಿರಾವ್, ಬಿಜೆಪಿ ಮುಖಂಡರಾದ ಎನ್.ಆರ್. ದೇವಾನಂದ, ಗಣಪತಿ ಬೆಳಗೋಡು, ಉಮೇಶ್ ಕಂಚುಗಾರ್, ಎಂ.ಎನ್. ಸುಧಾಕರ್ ಸೇರಿದಂತೆ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.
















Leave a Reply