ಹೊಸನಗರ: ಸಾಗರ- ಹೊಸನಗರ ವಿಧಾನಸಭಾ ಕ್ಷೇತ್ರದಲ್ಲಿ ಶೇ.100ರಷ್ಟು ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಮೊದಲ ಬೂತ್ ಎಂಬ ಹೆಗ್ಗಳಿಕೆಗೆ ಹರತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೂತ್ ಸಂಖ್ಯೆ 195 ಪಾತ್ರವಾಗಿದೆ. ಈ ವಿಶೇಷ ಸಾಧನೆಯನ್ನು ಗುರುತಿಸಿ ಮಾಜಿ ಸಚಿವ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ ಅವರು ಬಿಎಲ್ಒ, ಪಿಡಿಒ ಸೇರಿದಂತೆ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ತೊಡಗಿದ್ದ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಸನ್ಮಾನಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಬಿಎಲ್ಒ ಕಾವ್ಯಾ, ಗ್ರಾಮ ಲೆಕ್ಕಾಧಿಕಾರಿ ಶೋಭಾ, ಪಿಡಿಒ ಪರಮೇಶ್ವರ್ ಬಿ.ಬಿ. ಸೇರಿದಂತೆ ಸಂಬಂಧಿತ ಅಧಿಕಾರಿಗಳಿಗೆ ಹಾರ ಹಾಕಿ, ಶಾಲು ಹೊದಿಸಿ ಗೌರವಿಸಲಾಯಿತು. ಇದೇ ಬೂತ್ನಲ್ಲಿ ಬಿಎಲ್ಎ-2 ಆಗಿ ಹರತಾಳು ಹಾಲಪ್ಪ ಅವರೂ ಕಾರ್ಯನಿರ್ವಹಿಸಿದ್ದನ್ನು ಅವರು ಉಲ್ಲೇಖಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಹರತಾಳು ಹಾಲಪ್ಪ, ಮತದಾರರ ಪಟ್ಟಿ ಪರಿಷ್ಕರಣೆ ಪ್ರಜಾಪ್ರಭುತ್ವದ ಅತ್ಯಂತ ಮಹತ್ವದ ಪ್ರಕ್ರಿಯೆಯಾಗಿದ್ದು, ಪ್ರತಿಯೊಬ್ಬ ಅರ್ಹ ನಾಗರಿಕರ ಹೆಸರನ್ನು ಮತದಾರರ ಪಟ್ಟಿಯಲ್ಲಿ ದಾಖಲಿಸುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಅಧಿಕಾರಿಗಳು, ಸಿಬ್ಬಂದಿ ಹಾಗೂ ಕಾರ್ಯಕರ್ತರು ಮನೆ ಮನೆಗೆ ತೆರಳಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿದ್ದರಿಂದ ಹರತಾಳು ಗ್ರಾಮದ ಬೂತ್ ಸಂಖ್ಯೆ 195ರಲ್ಲಿ ಶೇ.100ರಷ್ಟು ಪರಿಷ್ಕರಣೆ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿದೆ. ಈ ಸಾಧನೆಗೆ ಅಧಿಕಾರಿಗಳು, ಸಿಬ್ಬಂದಿ, ಕಾರ್ಯಕರ್ತರು ಹಾಗೂ ಸ್ಥಳೀಯ ನಿವಾಸಿಗಳ ಸಹಕಾರವೇ ಪ್ರಮುಖ ಕಾರಣ ಎಂದು ಅವರು ತಿಳಿಸಿದರು.
ಮತದಾರರ ಪಟ್ಟಿಯ ಶುದ್ಧತೆ ಪ್ರಜಾಪ್ರಭುತ್ವದ ಬಲವನ್ನು ಹೆಚ್ಚಿಸುವ ಪ್ರಮುಖ ಅಂಶವಾಗಿದೆ. ಈ ಕಾರ್ಯದಲ್ಲಿ ಶ್ರಮಿಸಿದ ಪ್ರತಿಯೊಬ್ಬ ಅಧಿಕಾರಿಯ ಸೇವೆ ಶ್ಲಾಘನೀಯವಾಗಿದ್ದು, ಮುಂದಿನ ದಿನಗಳಲ್ಲಿಯೂ ಇದೇ ರೀತಿಯ ಜನಪರ ಕಾರ್ಯಗಳು ಯಶಸ್ವಿಯಾಗಿ ಮುಂದುವರಿಯಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಹೊಸನಗರ ಮಂಡಲ ಬಿಜೆಪಿ ಉಪಾಧ್ಯಕ್ಷ ಮೆಣಸೆ ಆನಂದ, ಕೆರೆಹಳ್ಳಿ ಹೋಬಳಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸುಂದರೇಶ, ಪ್ರಧಾನ ಕಾರ್ಯದರ್ಶಿ ಜಿ.ಡಿ ಮಲ್ಲಿಕಾರ್ಜುನ್ ಸೇರಿದಂತೆ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.













Leave a Reply