ಆನಂದಪುರ : ನಡು ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಬಸ್‌ ; ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

Addaheading 20261008 091231 0000 ಆನಂದಪುರ : ನಡು ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಬಸ್‌ ; ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು
Spread the love

ಸಾಗರ: ಶಿವಮೊಗ್ಗ–ಸಾಗರ ಮಾರ್ಗದಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್‌ವೊಂದು ಆಕಸ್ಮಿಕವಾಗಿ ಬೆಂಕಿಗಾಹುತಿಯಾಗಿ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಗುರುವಾರ ಬೆಳಗಿನ ಜಾವ ಆನಂದಪುರ ಸಮೀಪದ ಮುಂಬಾಳು ಬಳಿ ನಡೆದಿದೆ.

  ‘ಡ್ರೀಮ್ ಬಸ್’ ಟೂರ್ಸ್ ಅಂಡ್ ಟ್ರಾವೆಲ್ಸ್‌ಗೆ ಸೇರಿದ ಬಸ್‌ನಲ್ಲಿ ಬೆಳಿಗ್ಗೆ ಸುಮಾರು 5.45ರ ವೇಳೆಗೆ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಬಸ್‌ನ ಬ್ಯಾಟರಿ ಬಳಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ, ಚಾಲಕನ ಸೀಟ್ ಸಮೀಪ ಹೊಗೆ ಕಾಣಿಸಿಕೊಂಡಿದ್ದು, ತಕ್ಷಣ ಎಚ್ಚೆತ್ತ ಚಾಲಕ ಫೈರ್ ಎಕ್ಸ್‌ಟಿಂಗ್ವಿಷರ್ ಬಳಸಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ.

  ಆದರೆ ಕೆಲವೇ ಕ್ಷಣಗಳಲ್ಲಿ ಬೆಂಕಿ ಬಸ್‌ನ ಇತರೆ ಭಾಗಗಳಿಗೂ ವ್ಯಾಪಿಸಿದ್ದು, ಪರಿಸ್ಥಿತಿ ಕೈಮೀರಿದೆ. ಸಮಯಪ್ರಜ್ಞೆ ಮೆರೆದ ಚಾಲಕ ಬಸ್‌ನಲ್ಲಿದ್ದ ಪ್ರಯಾಣಿಕರನ್ನು ಹಾಗೂ ಅವರ ಲಗೇಜ್‌ಗಳನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ಬಳಿಕ ಪ್ರಯಾಣಿಕರನ್ನು ಮತ್ತೊಂದು ಬಸ್‌ನಲ್ಲಿ ಸಾಗರಕ್ಕೆ ಕಳುಹಿಸಿಕೊಡಲಾಗಿದೆ ಎಂದು ತಿಳಿದುಬಂದಿದೆ.

  ಈ ಬಸ್ ಬೆಂಗಳೂರಿನಿಂದ ಸಾಗರದತ್ತ ಬರುತ್ತಿದ್ದು, ಶಿವಮೊಗ್ಗ ಹಾಗೂ ಕುಂಸಿ ಭಾಗಗಳಲ್ಲಿ ಬಹುತೇಕ ಪ್ರಯಾಣಿಕರು ಇಳಿದಿದ್ದರು. ಹೀಗಾಗಿ ಘಟನೆ ಸಂಭವಿಸಿದ ವೇಳೆ ಬಸ್‌ನಲ್ಲಿ ಸಾಗರದತ್ತ ಪ್ರಯಾಣಿಸುತ್ತಿದ್ದ ಕೆಲವೇ ಪ್ರಯಾಣಿಕರು ಇದ್ದರು ಎನ್ನಲಾಗಿದೆ.

  ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಬಸ್ ಸಂಪೂರ್ಣವಾಗಿ ಸುಟ್ಟುಹೋಗಿದ್ದು, ಭಾರೀ ಪ್ರಮಾಣದ ಹಾನಿಯಾಗಿದೆ.

  ಆನಂದಪುರ ಮೂಲದ ಸಯ್ಯದ್ ಅಕ್ರಂ ಅವರು ಬಸ್‌ನ ಮಾಲೀಕರು ಎಂದು ತಿಳಿದುಬಂದಿದೆ. ಘಟನೆ ಕುರಿತು ಆನಂದಪುರ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಪ್ರವೀಣ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!