ರಿಪ್ಪನ್ಪೇಟೆ: ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಮರ್ಪಕವಾಗಿ ವಿದ್ಯುತ್ ಪೂರೈಕೆಯಾಗದ ಪರಿಣಾಮ ರೈತರು ಬೆಳೆದಿರುವ ಭತ್ತದ ಗದ್ದೆಗಳಿಗೆ ನೀರು ಹಾಯಿಸಲು ಸಾಧ್ಯವಾಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರು ಹಾಗೂ ಗ್ರಾಮಸ್ಥರು ಸೋಮವಾರ ಮೆಸ್ಕಾಂ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ನಿಗದಿತ ಸಮಯದಲ್ಲಿ ಸಮರ್ಪಕವಾಗಿ 3 ಫೇಸ್ ವಿದ್ಯುತ್ ಪೂರೈಕೆಯಾಗುತ್ತಿಲ್ಲ. ಇದರಿಂದ ಭತ್ತದ ಗದ್ದೆಗಳಿಗೆ ನೀರು ಹಾಯಿಸಲು ಸಾಧ್ಯವಾಗುತ್ತಿಲ್ಲ. ಮತ್ತೊಂದೆಡೆ ಅಡಿಕೆ ತೋಟಗಳಿಗೂ ನೀರಿನ ಕೊರತೆಯಾಗಿದ್ದು, ಅಡಿಕೆ ಗಿಡಗಳು ಒಣಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
ನಿಗದಿಪಡಿಸಿರುವ ಸಮಯದಲ್ಲಿ ನಿರಂತರವಾಗಿ 3 ಫೇಸ್ ವಿದ್ಯುತ್ ಪೂರೈಸಬೇಕು ಹಾಗೂ ಗ್ರಾಮದಲ್ಲಿ ಉಂಟಾಗಿರುವ ಓವರ್ಲೋಡ್ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸಬೇಕು ಎಂದು ಮೆಸ್ಕಾಂ ಅಧಿಕಾರಿಗಳಿಗೆ ಮನವಿ ಮಾಡಿದರು.
ಮನವಿ ಸಲ್ಲಿಸುವ ಸಂದರ್ಭದಲ್ಲಿ ಮೆಸ್ಕಾಂ ಕಚೇರಿ ಮುಂಭಾಗದಲ್ಲಿ ಕೆಲಕಾಲ ಅಧಿಕಾರಿಗಳು ಹಾಗೂ ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆಯಿತು. ಬಾಳೂರು ಗ್ರಾಮಸ್ಥರಿಗೆ ಮಾತ್ರ ವಿದ್ಯುತ್ ಪೂರೈಕೆಯಲ್ಲಿ ಏಕೆ ವ್ಯತ್ಯಯವಾಗುತ್ತಿದೆ ಎಂದು ಪ್ರಶ್ನಿಸಿದ ಗ್ರಾಮಸ್ಥರು, ನವಟೂರು ದಾಟಿದರೆ ಸಾಗರ ತಾಲ್ಲೂಕಿನಲ್ಲಿ ನಿರಂತರವಾಗಿ 3 ಫೇಸ್ ವಿದ್ಯುತ್ ಪೂರೈಕೆಯಾಗುತ್ತಿದೆ. ರಿಪ್ಪನ್ಪೇಟೆ ಪಟ್ಟಣದಿಂದ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆರಂಭದವರೆಗೂ ವಿದ್ಯುತ್ ಪೂರೈಕೆ ಸಮರ್ಪಕವಾಗಿದೆ. ನಮಗೆ ಮಾತ್ರ ಏಕೆ ಈ ಅನ್ಯಾಯ? ಮಲತಾಯಿ ಧೋರಣೆ ಏಕೆ?” ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.
ಕೃಷಿ ಪಂಪ್ಸೆಟ್ಗಳಿಗೆ ಮಾತ್ರವಲ್ಲದೆ, ಮನೆಗಳಿಗೆ ಪೂರೈಕೆಯಾಗುವ ವಿದ್ಯುತ್ನಲ್ಲಿಯೂ ನಿರಂತರ ವ್ಯತ್ಯಯ ಉಂಟಾಗುತ್ತಿದೆ ಎಂದು ಗ್ರಾಮಸ್ಥರು ದೂರಿದರು. ವಿದ್ಯುತ್ ಕಡಿತದಿಂದ ಮಕ್ಕಳ ವಿದ್ಯಾಭ್ಯಾಸಕ್ಕೂ ತೊಂದರೆಯಾಗುತ್ತಿದ್ದು, ಕತ್ತಲಲ್ಲೇ ಕಾಲ ಕಳೆಯುವ ಪರಿಸ್ಥಿತಿ ಎದುರಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಆದಷ್ಟು ಬೇಗ ಓವರ್ಲೋಡ್ ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸಿ, ನಿಗದಿತ ಸಮಯದಲ್ಲಿ ಸಮರ್ಪಕ 3 ಫೇಸ್ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಗ್ರಾಮಸ್ಥರು ಮೆಸ್ಕಾಂ ಅಧಿಕಾರಿ ಶಾಖೆಯ ಮೇಲ್ವಿಚಾರಕ ಬಿ. ಎಂ ಕೃಷ್ಣಪ್ಪ ಅವರಿಗೆ ಮನವಿ ಸಲ್ಲಿಸಿದರು.
ಕಾರ್ಯನಿರ್ವಾಹಕ ಇಂಜಿನಿಯರ್ ಅವರ ಅನುಪಸ್ಥಿತಿಯಲ್ಲಿ ಮನವಿ ಸ್ವೀಕರಿಸಿದ ಕೃಷ್ಣಪ್ಪ ಅವರು ನಿಮ್ಮ ಸಮಸ್ಯೆಗಳನ್ನು ಮೇಲಾಧಿಕಾರಿಗಳ ಗಮನಕ್ಕೆ ಬರುತ್ತೇನೆ. ಸಮಸ್ಯೆ ಬಗೆಹರಿಸುವ ಭರವಸೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

















Leave a Reply