ಹೊಸನಗರ: ಸ್ಥಳೀಯ ಕಾಂಗ್ರೆಸ್ ಶಾಸಕರ ಅಣತಿಯಂತೆ ಬಿಜೆಪಿ ಸ್ವಾಭಿಮಾನಿ ಕಾರ್ಯಕರ್ತರಿಗೆ ತೊಂದರೆ ನೀಡುವ ಕೆಲಸವನ್ನು ಪೊಲೀಸ್ ಇಲಾಖೆ ಮಾಡುತ್ತಿದ್ದು, ಇಂತಹ ಅನ್ಯಾಯವನ್ನು ಬಿಜೆಪಿ ಪಕ್ಷ ಎಂದಿಗೂ ಸಹಿಸುವುದಿಲ್ಲ ಎಂದು ಸಂಸದ ಬಿ.ವೈ. ರಾಘವೇಂದ್ರ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದ ಪೊಲೀಸ್ ಇಲಾಖೆ ಮುಂಭಾಗ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಏರ್ಪಡಿಸಲಾಗಿದ್ದ ಬೃಹತ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಶಾಸಕರ ಸೂಚನೆಯಂತೆ ಬಿಜೆಪಿ ಕಾರ್ಯಕರ್ತರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ. ನ್ಯಾಯವಾಗಿ ದುಡಿದು ಬದುಕುತ್ತಿರುವ ಕಾರ್ಯಕರ್ತರಿಗೆ ಇದರಿಂದ ತೊಂದರೆ ಉಂಟಾಗುತ್ತಿದ್ದು, ವಿರೋಧ ಪಕ್ಷವನ್ನು ಹೆದರಿಸುವ ಪ್ರಯತ್ನ ನಡೆಯುತ್ತಿದೆ. ಆದರೆ ಬಿಜೆಪಿ ಕಾರ್ಯಕರ್ತರು ಇಂತಹ ಒತ್ತಡಗಳಿಗೆ ಎಂದಿಗೂ ಹೆದರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಹೊಸನಗರ ಪಟ್ಟಣದಲ್ಲಿ ಹಿಂದೆ ನಡೆದ ಅಭಿವೃದ್ಧಿ ಕಾರ್ಯಗಳ ಹಿಂದೆ ಬಿಜೆಪಿ ಕಾರ್ಯಕರ್ತರ ಅಪಾರ ಶ್ರಮವಿದೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ಕಾಲದಲ್ಲೂ, ಅರಗ ಜ್ಞಾನೇಂದ್ರ ಹಾಗೂ ಹರತಾಳು ಹಾಲಪ್ಪ ಶಾಸಕರಾಗಿದ್ದ ಅವಧಿಯಲ್ಲೂ ಯಾವುದೇ ರೀತಿಯಲ್ಲಿ ಪೊಲೀಸ್ ಇಲಾಖೆ ಅಥವಾ ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಂಡಿಲ್ಲ. ಆದರೆ ಇಂದು ಸ್ಥಳೀಯ ಶಾಸಕರು ಅಧಿಕಾರ ದುರುಪಯೋಗ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಕಾರ್ಯಕರ್ತರ ಮೇಲೆ ದಾಖಲಾಗಿರುವ ಪ್ರಕರಣಗಳ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ, ಇತ್ತೀಚೆಗೆ ಬಿಜೆಪಿ ಕಾರ್ಯಕರ್ತರ ಮೇಲೆ ದಾಖಲಾದ ಪ್ರಕರಣಗಳು ಪೂರ್ವನಿಯೋಜಿತವಾಗಿದ್ದು, ಇದರ ಹಿಂದೆ ಕಾಂಗ್ರೆಸ್ ಶಾಸಕರು ಹಾಗೂ ಅವರ ಆಪ್ತರ ಹಸ್ತಕ್ಷೇಪವಿದೆ ಎಂದರು. ಸಾಗರ ಮತ್ತು ಹೊಸನಗರ ಭಾಗದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗುತ್ತಿದ್ದು, ಇದನ್ನು ಪಕ್ಷ ಸಹಿಸುವುದಿಲ್ಲ ಎಂದು ಎಚ್ಚರಿಸಿದರು. ವಿದ್ಯುತ್ ಸಮಸ್ಯೆ, ರೈತರ ಸಮಸ್ಯೆಗಳನ್ನು ಬಗೆಹರಿಸುವ ಬದಲು ಶಾಸಕರು ದ್ವೇಷ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಸೂಕ್ತ ತನಿಖೆ ನಡೆಯುವವರೆಗೆ ಹೋರಾಟ ಮುಂದುವರಿಸುವುದಾಗಿ ತಿಳಿಸಿ, ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಈ ಪ್ರತಿಭಟನೆಯಲ್ಲಿ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ, ಶಿವಮೊಗ್ಗ ಶಾಸಕ ಚನ್ನಬಸಪ್ಪ, ವಿಧಾನಪರಿಷತ್ ಸದಸ್ಯ ಡಿ.ಎಸ್. ಅರುಣ್, ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್, ಟಿಡಿ ಮೇಘರಾಜ,ತಾಲೂಕು ಅಧ್ಯಕ್ಷ ಎನ್. ಸತೀಶ್, ಗಣಪತಿ ಬೆಳಗೋಡು, ಉಮೇಶ್ ಕಂಚುಗಾರ್, ದೇವಾನಂದ ಎನ್ ಆರ್, ಆರ್ ಟಿ ಗೋಪಾಲ,ಎಂ ಎನ್ ಸುಧಾಕರ್, ಪದ್ಮಿನಿ ರಾವ್, ಮೆಣಸೆ ಆನಂದ,ಹಾಲಗದ್ದೆ ಉಮೇಶ, ವೀರೇಶ ಅಲುವಳ್ಳಿ, ನಾಗಾರ್ಜುನ ಸ್ವಾಮಿ, ಮಹಿಳಾ ಮುಖಂಡರಾದ ರೇಖಾ ರವಿ ರಾವ್, ನಾಗರತ್ನ ದೇವರಾಜ್ ಸೇರಿದಂತೆ ಅನೇಕ ನಾಯಕರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.













Leave a Reply