ಶಿವಮೊಗ್ಗ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಬೇಕು ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅದು ಸಂಪೂರ್ಣ ಸುಳ್ಳು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸಿ.ಎಸ್. ಚಂದ್ರಭೂಪಾಲ ಸ್ಪಷ್ಟಪಡಿಸಿದ್ದಾರೆ.
ಯೂಟ್ಯೂಬ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ತಪ್ಪು ಮಾಹಿತಿಯನ್ನು ನಂಬಿ, ಫಲಾನುಭವಿಗಳು ಖಾಸಗಿ ಸೈಬರ್ ಕೇಂದ್ರಗಳು, ಗ್ರಾಮ್ ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಿಗೆ ಮುಗಿಬೀಳುತ್ತಿರುವುದು ಗಮನಕ್ಕೆ ಬಂದಿದೆ. ಆದ್ದರಿಂದ ಯಾವುದೇ ಅಧಿಕೃತ ಆದೇಶವಿಲ್ಲದೆ ಸಾರ್ವಜನಿಕರು ಅನಗತ್ಯವಾಗಿ ಇ-ಕೆವೈಸಿಗಾಗಿ ಅಲೆದಾಡಬಾರದು ಎಂದು ಅವರು ಮನವಿ ಮಾಡಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪರಿಷ್ಕರಣೆ ಕುರಿತು ಸರ್ಕಾರದ ಮಟ್ಟದಲ್ಲಿ ಚಿಂತನೆ ಇದ್ದರೂ, ಅದು ಹೇಗೆ ನಡೆಯಬೇಕು ಹಾಗೂ ಯಾವ ಮಾರ್ಗಸೂಚಿಗಳನ್ನು ಅನುಸರಿಸಬೇಕು ಎಂಬ ಕುರಿತು ಇನ್ನೂ ಯಾವುದೇ ಅಧಿಕೃತ ಆದೇಶ ಅಥವಾ ಮಾರ್ಗಸೂಚಿ ಹೊರಬಿದ್ದಿಲ್ಲ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ ಎಪಿಎಲ್, ಬಿಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿ ಹೊಂದಿರುವ ಕುಟುಂಬದ ಯಜಮಾನಿಯರಿಗೆ ಪ್ರತಿ ತಿಂಗಳು ₹2,000 ಸಹಾಯಧನವನ್ನು ಡಿಬಿಟಿ ಮೂಲಕ ಜಮೆ ಮಾಡಲಾಗುತ್ತಿದೆ. ಯೋಜನೆ ಆರಂಭವಾದ ಬಳಿಕ ಇದುವರೆಗೆ 30 ಕಂತುಗಳ ಹಣ ಯಶಸ್ವಿಯಾಗಿ ಫಲಾನುಭವಿಗಳ ಖಾತೆಗೆ ಜಮೆಯಾಗಿದೆ. ಪ್ರಸ್ತುತ ಹಣ ಪಾವತಿ ಯಾವುದೇ ಅಡಚಣೆಯಿಲ್ಲದೆ ನಡೆಯುತ್ತಿದ್ದು, ಇ-ಕೆವೈಸಿ ಹೆಸರಿನಲ್ಲಿ ಹರಡುತ್ತಿರುವ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.














Leave a Reply