ಹೊಸನಗರ :ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ರಾಹುಲ್ ಗಾಂಧಿ ಬಂಧನ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

Add a heading 20260723 202052 0000 ಹೊಸನಗರ :ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ರಾಹುಲ್ ಗಾಂಧಿ ಬಂಧನ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
Spread the love

ಹೊಸನಗರ: ನೀಟ್ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಹೊಸನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.
ತಾಲೂಕು ಕಚೇರಿ ಆವರಣದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ಚಂದ್ರಮೌಳಿ, ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ತಡೆಯುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು. ಈ ವಿಚಾರವನ್ನು ಪ್ರಶ್ನಿಸಿದ ಕೆಲವು ವಿದ್ಯಾರ್ಥಿಗಳ ಮೇಲೆ ದೆಹಲಿಯಲ್ಲಿ ಹಲ್ಲೆ ನಡೆಸಲಾಗಿದೆ. ‘ಲೋಕ ಭವನ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಮೇಲೂ ಲಾಠಿ ಪ್ರಹಾರ ನಡೆಸಿರುವುದು ಪ್ರಜಾಪ್ರಭುತ್ವಕ್ಕೆ ಕಪ್ಪು ಚುಕ್ಕೆ ಎಂದು ಟೀಕಿಸಿದರು.

ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನೂ ಬಂಧಿಸಿ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿದ ಅವರು, ವಿದ್ಯಾರ್ಥಿಗಳು ಮತ್ತು ಯುವಜನರ ಸಮಸ್ಯೆಗಳನ್ನು ಆಲಿಸದ ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಮುಂದುವರಿಯಲು ನೈತಿಕ ಹಕ್ಕಿಲ್ಲ ಎಂದು ಹೇಳಿದರು. ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಹಾಗೂ ಕೇಂದ್ರ ಸರ್ಕಾರದ ವೈಫಲ್ಯಕ್ಕೆ ಜನರು ತಕ್ಕ ಉತ್ತರ ನೀಡಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಸುಮಾ ಸುಬ್ರಮಣ್ಯ, ಎಚ್.ಬಿ. ಚಿದಂಬರ, ಡಿ.ಎಂ. ಸದಾಶಿವ, ಎಂ.ಪಿ. ಸುರೇಶ್, ಬಂಡಿ ರಾಮಚಂದ್ರ, ಈಶ್ವರಪ್ಪ ಗೌಡ, ಡಿ.ಆರ್. ವಿನಯಕುಮಾರ್, ವಿಶ್ವ ನಾಗೋಡಿ, ಆಸೀಫ್, ನಾಗೇಂದ್ರ ಜೋಗಿ, ಸಾಕಮ್ಮ ಮನೋಹರ, ದೀಪಿಕಾ, ರಾಧಿಕಾ ಶೆಟ್ಟಿ, ಜಯನಗರ ಗುರು ಸೇರಿದಂತೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *