ಹೊಸನಗರ: ಯಾವುದೇ ದೇಶ ಅಭಿವೃದ್ಧಿ ಹೊಂದಬೇಕಾದರೆ ಶಿಕ್ಷಕರ ಪಾತ್ರ ಅತ್ಯಂತ ಪ್ರಮುಖವಾಗಿರುತ್ತದೆ. ದೇಶ ಕಟ್ಟುವ ಹಾಗೂ ರಾಷ್ಟ್ರದ ಏಳ್ಗೆಗಾಗಿ ಶಿಕ್ಷಕರು ಸಲ್ಲಿಸುತ್ತಿರುವ ಸೇವೆ ಶ್ಲಾಘನೀಯ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು.
ಹೊಸನಗರದ ಆರ್ಯ ಈಡಿಗರ ಸಭಾಭವನದಲ್ಲಿ ಸೋಮವಾರ ಭಾರತ ರತ್ನ ಡಾ. ಎಸ್. ರಾಧಾಕೃಷ್ಣನ್ ಅವರ 138ನೇ ಜನ್ಮದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅಜ್ಞಾನವೆಂಬ ಅಂಧಕಾರವನ್ನು ಹೋಗಲಾಡಿಸಿ ಜ್ಞಾನದ ಬೆಳಕನ್ನು ನೀಡುವವರೇ ಗುರುಗಳು. ಪ್ರತಿಯೊಬ್ಬರೂ ಜೀವನದಲ್ಲಿ ಯಾವುದೇ ಉನ್ನತ ಸ್ಥಾನಕ್ಕೇರಿದರೂ ಗುರುಗಳ ಋಣ ತೀರಿಸಲಾಗದು. ವಿದ್ಯಾರ್ಥಿಗಳಿಗೆ ವಿದ್ಯೆಯ ಜೊತೆಗೆ ಜೀವನದ ಮೌಲ್ಯಗಳನ್ನು ಕಲಿಸಿ ಸ್ಫೂರ್ತಿ ನೀಡುವ ಶಿಕ್ಷಕರ ಸೇವೆ ಮಹತ್ವದ್ದಾಗಿದೆ ಎಂದರು.
ಶಾಲೆ ಬಿಟ್ಟಿರುವ ಮಕ್ಕಳನ್ನು ಮರಳಿ ಶಾಲೆಗೆ ಕರೆತರುವ ಶಿಕ್ಷಕರಿಗೆ ₹10 ಸಾವಿರ ಬಹುಮಾನ ನೀಡಲಾಗುವುದು. ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗಬಾರದು. ಶಾಲೆ ಬಿಟ್ಟ ವಿದ್ಯಾರ್ಥಿಗಳು ಎಲ್ಲೇ ಇದ್ದರೂ ಅವರನ್ನು ಗುರುತಿಸಿ ಮರಳಿ ಶಾಲೆಗೆ ಕರೆತರುವ ಶಿಕ್ಷಕರಿಗೆ ಈ ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.
ಹೊಸನಗರ ತಾಲೂಕು ಶಿಕ್ಷಕರ ಬಹುದಿನಗಳ ಬೇಡಿಕೆಯಾದ ಗುರುಭವನ ನಿರ್ಮಾಣಕ್ಕೆ ಶಾಸಕರ ನಿಧಿ ಹಾಗೂ ಸರ್ಕಾರದಿಂದ ಅಗತ್ಯ ಅನುದಾನ ಒದಗಿಸಲು ಕ್ರಮ ಕೈಗೊಳ್ಳಲಾಗುವುದು. ಶಿಕ್ಷಣಾಧಿಕಾರಿಗಳ ಓಡಾಟಕ್ಕೆ ಜೀಪ್ ಒದಗಿಸುವುದಾಗಿ ತಿಳಿಸಿದ ಅವರು, ತಾಲೂಕು ಶೈಕ್ಷಣಿಕವಾಗಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆಯುವಂತೆ ಶಿಕ್ಷಕರು ಶ್ರಮಿಸಬೇಕು ಎಂದು ಕರೆ ನೀಡಿದರು.
ಗ್ಯಾರಂಟಿ ಸಮಿತಿ ಅಧ್ಯಕ್ಷ ಪಿ. ಚಿದಂಬರ ಮಾತನಾಡಿ, ಶಿಕ್ಷಕರು ವಿದ್ಯಾರ್ಥಿಗಳಿಗೆ ಪ್ರೀತಿ, ವಾತ್ಸಲ್ಯದಿಂದ ಉತ್ತಮ-ಕೆಟ್ಟದ್ದನ್ನು ತಿಳಿಸಿ ಜೀವನದ ದಾರಿ ತೋರಿಸಬೇಕು. ವಿದ್ಯಾರ್ಥಿಗಳು ಗುರುಗಳನ್ನು ತಂದೆ-ತಾಯಿಯರಂತೆ ಗೌರವಿಸಿ, ಜೀವನದ ಕೊನೆಯವರೆಗೂ ಶಿಕ್ಷಕರನ್ನು ಸ್ಮರಿಸಬೇಕು ಎಂದರು.
ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪುಟ್ಟಸ್ವಾಮಿ ಮಾತನಾಡಿ, ಶಿಕ್ಷಕರಿಗೆ ಬೋಧನೆಯ ಹೊರತಾಗಿ ವಿವಿಧ ಸರ್ಕಾರಿ ಕೆಲಸಗಳ ಹೊರೆ ಹೆಚ್ಚಾಗಿದೆ. ಚುನಾವಣೆ ಕರ್ತವ್ಯ, ಲೆಕ್ಕಪತ್ರ ನಿರ್ವಹಣೆ ಸೇರಿದಂತೆ ಇತರೆ ಕೆಲಸಗಳಿಂದ ಶಿಕ್ಷಕರನ್ನು ಮುಕ್ತಗೊಳಿಸಿದರೆ ವಿದ್ಯಾರ್ಥಿಗಳ ಬೋಧನೆಗೆ ಹೆಚ್ಚಿನ ಸಮಯ ನೀಡಲು ಸಾಧ್ಯವಾಗುತ್ತದೆ. ಶಿಕ್ಷಕರ ಮೇಲಿನ ಹೆಚ್ಚುವರಿ ಕೆಲಸದ ಹೊರೆ ಕಡಿಮೆ ಮಾಡಬೇಕು ಎಂದು ಒತ್ತಾಯಿಸಿದರು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಭರತ್ರಾಜ್, ಕಾರ್ಯನಿರ್ವಹಣಾಧಿಕಾರಿ ನರೇಂದ್ರಕುಮಾರ್, ನೌಕರರ ಸಂಘದ ಅಧ್ಯಕ್ಷ ಸೋಮಶೇಖರ್, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ನಾಗರಾಜ್ ಎಸ್.ಪಿ., ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರೇಣುಕೇಶ್, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ರಮೇಶ್, ದೈಹಿಕ ಶಿಕ್ಷಣ ಪರಿವೀಕ್ಷಕ ವಿನಯ್ ಹೆಗ್ಡೆ, ಎಂ. ರಂಗನಾಥ್ ಸೇರಿದಂತೆ ಶಿಕ್ಷಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

















Leave a Reply