
ಹೊಸನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲ್ಲೂಕಿನ ಕುದೂರು ಹೋಬಳಿಯ ವೀರಾಪುರ ಗ್ರಾಮದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಗ್ರಾಮ ಆಡಳಿತಾಧಿಕಾರಿಯ ಮೇಲೆ ನಡೆದ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ಹೊಸನಗರ ತಾಲ್ಲೂಕು ಗ್ರಾಮ ಆಡಳಿತಾಧಿಕಾರಿಗಳ ಸಂಘದ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಭರತ್‌ರಾಜ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಸಂಘದ ಅಧ್ಯಕ್ಷ ಮಂಜುನಾಥ್ ಅವರ ನೇತೃತ್ವದಲ್ಲಿ ತಾಲ್ಲೂಕು ಕಚೇರಿ ಮುಂಭಾಗ ಜಮಾಯಿಸಿದ ಗ್ರಾಮ ಆಡಳಿತಾಧಿಕಾರಿಗಳು, ಸರ್ಕಾರಿ ನೌಕರರ ಮೇಲೆ ನಡೆಯುತ್ತಿರುವ ಹಲ್ಲೆ ಘಟನೆಗಳನ್ನು ತೀವ್ರವಾಗಿ ಖಂಡಿಸಿದರು.
ಈ ವೇಳೆ ಮಾತನಾಡಿದ ಸಂಘದ ಅಧ್ಯಕ್ಷ ಮಂಜುನಾಥ್, ಮೇ ೨೬ರಂದು ಮಾಗಡಿ ತಾಲ್ಲೂಕಿನ ಕುದೂರು ಹೋಬಳಿಯ ವೀರಾಪುರ ಗ್ರಾಮದಲ್ಲಿ ನಕಾಶೆ ಕಂಡ ದಾರಿಯನ್ನು ತೆರವುಗೊಳಿಸುವ ಸಂದರ್ಭದಲ್ಲಿ ತಾಲ್ಲೂಕು ಸರ್ವೆ ಅಧಿಕಾರಿ ಹಾಗೂ ಗ್ರಾಮ ಸಹಾಯಕರೊಂದಿಗೆ ಕರ್ತವ್ಯ ನಿರ್ವಹಿಸುತ್ತಿದ್ದ ಗ್ರಾಮ ಆಡಳಿತಾಧಿಕಾರಿ ಹಡಗಲಿ ಹೊನ್ನಪ್ಪ ಅವರ ಮೇಲೆ ಕೆಲವರು ಅವಾಚ್ಯ ಶಬ್ದಗಳಿಂದ ನಿಂದಿಸಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದರು.
ಈ ಹಲ್ಲೆಯಿಂದ ಹೊನ್ನಪ್ಪ ಅವರಿಗೆ ಗಂಭೀರ ಗಾಯಗಳಾಗಿದ್ದು, ಆರೋಪಿಗಳ ವಿರುದ್ಧ ತಕ್ಷಣವೇ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಜೊತೆಗೆ ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರಿ ನೌಕರರಿಗೆ ಸೂಕ್ತ ರಕ್ಷಣೆ ಒದಗಿಸಿ, ಭಯಮುಕ್ತವಾಗಿ ಕರ್ತವ್ಯ ನಿರ್ವಹಿಸಲು ಅಗತ್ಯ ಭದ್ರತೆ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಶಿರಸ್ತೇದಾರ್ ಮಂಜುನಾಥ್ ಕಟ್ಟೆ, ಆರ್.ಐ ಅಂಜನೇಯ, ರೇಣುಕಯ್ಯ, ಪ್ರಕಾಶ್, ಸಿದ್ದಪ್ಪ, ಲೋಹಿತ್, ನವೀನ್‌ಕುಮಾರ್ ಸೇರಿದಂತೆ ತಾಲ್ಲೂಕಿನ ಗ್ರಾಮ ಆಡಳಿತಾಧಿಕಾರಿಗಳು ಉಪಸ್ಥಿತರಿದ್ದರು.


















Leave a Reply