ರಿಪ್ಪನ್ಪೇಟೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಮತ್ತು ವಸತಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಕೆಂಚನಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಳುವಳ್ಳಿ ಗ್ರಾಮದ ಮಜರೆ ಕಮದೂರಿನಲ್ಲಿ ₹17 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ ಕಟ್ಟಡಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಶುಕ್ರವಾರ ಸಂಜೆ ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಶಂಕುಸ್ಥಾಪನೆ ಮಾಡಿದರು.
ನಂತರ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಶಾಸಕ ಗೋಪಾಲಕೃಷ್ಣ ಬೇಳೂರು, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಸುಸಜ್ಜಿತ ವಸತಿ ವ್ಯವಸ್ಥೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ವಿದ್ಯಾರ್ಥಿಗಳು ಈ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಆಶಯಗಳನ್ನು ಸಾರಿದ ಡಾ. ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನ ಹಾಗೂ ವಿಚಾರಧಾರೆಗಳ ಕುರಿತು ನಾಗರಿಕರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದರು.
ದೂರದ ಊರುಗಳಿಂದ ಬರುವ ವಿದ್ಯಾರ್ಥಿಗಳಿಗೆ ಸುರಕ್ಷಿತ ವಸತಿ, ಕಲಿಕೆಗೆ ಪೂರಕ ವಾತಾವರಣ ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಪ್ರಕೃತಿಯ ಮಡಿಲಿನಲ್ಲಿರುವ ಪ್ರಶಾಂತ ಸ್ಥಳದಲ್ಲಿ ವಸತಿ ಶಾಲೆಯ ಕಟ್ಟಡ ನಿರ್ಮಾಣವಾಗಲಿದ್ದು, ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲಕರ ವಾತಾವರಣ ಕಲ್ಪಿಸಲಿದೆ ಎಂದು ತಿಳಿಸಿದರು.
ಕಟ್ಟಡ ಕಾಮಗಾರಿಯನ್ನು ಮುಂದಿನ 11 ತಿಂಗಳೊಳಗೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಗುತ್ತಿಗೆದಾರರು ಗುಣಮಟ್ಟಕ್ಕೆ ಆದ್ಯತೆ ನೀಡಿ ಕಾಮಗಾರಿ ನಡೆಸಬೇಕು. ಮುಂಬರುವ ಶೈಕ್ಷಣಿಕ ವರ್ಷದಲ್ಲಿ ಕಟ್ಟಡವನ್ನು ಲೋಕಾರ್ಪಣೆಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಸೂಚಿಸಿದರು.
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಪ್ರಾಚಾರ್ಯರು ಹಾಗೂ ಶಿವಮೊಗ್ಗ ಜಿಲ್ಲಾ ಸಮನ್ವಯಾಧಿಕಾರಿ ಟಿ.ಕೆ. ಚಂದ್ರಪ್ಪ ಮಾತನಾಡಿ, ರಾಜ್ಯದಲ್ಲಿ 874 ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗಳು ಕಾರ್ಯನಿರ್ವಹಿಸುತ್ತಿವೆ. ಶಿವಮೊಗ್ಗ ಜಿಲ್ಲೆಯಲ್ಲಿ 34 ವಸತಿ ಶಾಲೆಗಳಿದ್ದು, ಉತ್ತಮ ಬೋಧನೆ ಮತ್ತು ಶಿಕ್ಷಕರ ಪರಿಶ್ರಮದಿಂದ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆಯುತ್ತಿದ್ದಾರೆ. ಈ ಸಂಸ್ಥೆಗಳು ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಭದ್ರ ಬುನಾದಿಯಾಗಿವೆ ಎಂದರು.
ಗ್ರಾಮೀಣ ಪ್ರದೇಶದ ಪರಿಶಿಷ್ಟ ಜಾತಿ ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿ ಪ್ರೋತ್ಸಾಹ ನೀಡುತ್ತಿದೆ ಎಂದು ತಿಳಿಸಿದರು.
ಗ್ಯಾರಂಟಿ ಸಮಿತಿಯ ತಾಲೂಕು ಅಧ್ಯಕ್ಷ ಎಚ್.ಬಿ. ಚಿದಂಬರಂ ಹಾಗೂ ಬಗರ್ಹುಕುಂ ಸಮಿತಿಯ ಸದಸ್ಯೆ ಸಾಕಮ್ಮ ಮಾತನಾಡಿ, ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಕ್ಷೇತ್ರದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಕೋಟ್ಯಂತರ ರೂಪಾಯಿ ಅನುದಾನ ನೀಡುತ್ತಿದ್ದರೂ ವಿರೋಧ ಪಕ್ಷದವರು ಟೀಕೆ ಮಾಡುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀಕ್ಷಕ ಎಂಜಿನಿಯರ್ ನಳಿನಾಕ್ಷಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲೇಶಪ್ಪ, ಹೊಸನಗರ ತಾಲೂಕು ತಹಶೀಲ್ದಾರ್ ಭರತ್ ರಾಜ್, ತಾಲೂಕು ಪಂಚಾಯಿತಿ ಇಒ ನರೇಂದ್ರಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್, ಕಮದೂರು ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ ಪ್ರಾಚಾರ್ಯ ಚಂದ್ರಪ್ಪ ಎಚ್., ಎಂ ಎಂ. ಪರಮೇಶ್,ಎಚ್.ವಿ. ಈಶ್ವರಪ್ಪಗೌಡ, ಬಂಡಿ ರಾಮಚಂದ್ರ, ಅಮೀರ್ಹಂಜಾ, ಉಬೇದುಲ್ಲಾ, ಮೊಹಮ್ಮದ್ ಶರೀಫ್, ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಸ್ಥಳೀಯ ಗಣ್ಯರು ಉಪಸ್ಥಿತರಿದ್ದರು.
ಪ್ರಣತಿ ಅಣ್ಣಪ್ಪ ಪ್ರಾರ್ಥಿಸಿದರು. ವಸತಿ ಶಾಲೆಯ ಪ್ರಾಚಾರ್ಯ ಚಂದ್ರಪ್ಪ ಎಚ್. ಸ್ವಾಗತಿಸಿದರು.
















Leave a Reply