ಫೆಬ್ರವರಿ 28 ರಿಂದ ಮಾರ್ಚ್ 16 ರ ವರೆಗೆ ಪರೀಕ್ಷೆ
ರಿಪ್ಪನ್‌ಪೇಟೆ : 2025–26ನೇ ಸಾಲಿನ ಪಿಯುಸಿ ವಾರ್ಷಿಕ ಪರೀಕ್ಷೆಗಳು ರಾಜ್ಯಾದ್ಯಂತ ಫೆಬ್ರವರಿ 28ರಿಂದ ಆರಂಭವಾಗಲಿದ್ದು, ರಿಪ್ಪನ್‌ಪೇಟೆ ಸರ್ಕಾರಿ ಪದವಿಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಒಟ್ಟು 267 ವಿದ್ಯಾರ್ಥಿಗಳ ಪೈಕಿ 242 ಹೊಸಬರು,17 ಪುನರಾವರ್ತಿತ,7 ಖಾಸಗಿ ಅಭ್ಯರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಪರೀಕ್ಷಾ ಮುಖ್ಯ ಅಧೀಕ್ಷಕ ಆರ್. ಅರುಣ್‌ಕುಮಾರ್ ಅವರು, ಪರೀಕ್ಷೆಗೆ ಸಂಬಂಧಿಸಿದಂತೆ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ಕಾಲೇಜಿನಲ್ಲಿ ನಡೆದ ಪೂರ್ವಭಾವಿ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಫೆಬ್ರವರಿ 28ರಿಂದ ಆರಂಭವಾಗುವ ಪರೀಕ್ಷೆಗಳು ಮಾರ್ಚ್ 16ರವರೆಗೆ ನಡೆಯಲಿವೆ ಎಂದು ವಿವರಿಸಿದರು.
ಪರೀಕ್ಷಾ ಕೇಂದ್ರದಲ್ಲಿ 9 ಕೊಠಡಿಗಳನ್ನು ವ್ಯವಸ್ಥೆ ಮಾಡಲಾಗಿದ್ದು, ವಿದ್ಯಾರ್ಥಿಗಳ ರಿಜಿಸ್ಟರ್ ನಂಬರನ್ನು ಕ್ರಮಬದ್ಧವಾಗಿ ಬರೆಯಲಾಗಿದೆ. ಎಲ್ಲಾ ಕೊಠಡಿಗಳಲ್ಲೂ ಸಿಸಿ ಕ್ಯಾಮೆರಾಗಳನ್ನು ಸ್ಥಾಪಿಸಲಾಗಿದ್ದು, ಸುಸಜ್ಜಿತವಾಗಿ ಪರೀಕ್ಷೆ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.ಪರೀಕ್ಷಾ ಅವಧಿಯಲ್ಲಿ ಕೇಂದ್ರದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗುವುದು. ಸಾರ್ವಜನಿಕರು ಅನವಶ್ಯಕವಾಗಿ ಪರೀಕ್ಷಾ ಕೇಂದ್ರದ ಬಳಿ ಓಡಾಡದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯ ಕೃಷ್ಣಮೂರ್ತಿ, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗ ಹಾಜರಿದ್ದರು.














Leave a Reply