ರಿಪ್ಪನ್‌ಪೇಟೆ: ಆರೋಗ್ಯ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದ್ದು, ನೆಮ್ಮದಿಯ ಜೀವನಕ್ಕೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದು ಅತ್ಯಂತ ಮುಖ್ಯ ಎಂದು ಶಿವಮೊಗ್ಗ ಸರ್ಜಿ ಆಸ್ಪತ್ರೆಯ ಹೃದಯ ತಜ್ಞ ಡಾ. ಅಭಿಷೇಕ್ ಹೇಳಿದರು.
ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಿಜೆಪಿ ಕೆರೆಹಳ್ಳಿ ಮಹಾಶಕ್ತಿ ಕೇಂದ್ರ, ರಿಪ್ಪನ್‌ಪೇಟೆ ರೋಟರಿ ಕ್ಲಬ್ ಸಹಯೋಗ ಹಾಗೂ ಬಿಜೆಪಿ ಒಬಿಸಿ ಮೋರ್ಚಾ ಮತ್ತು ಸರ್ಜಿ ಸಮೂಹ ಸಂಸ್ಥೆಯ ಸಹಕಾರದಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಹೃದಯದ ಆರೋಗ್ಯದ ಬಗ್ಗೆ ಸಾರ್ವಜನಿಕರು ಹೆಚ್ಚಿನ ಕಾಳಜಿ ವಹಿಸಬೇಕು. ಹೃದಯ ಸಂಬಂಧಿತ ಕಾಯಿಲೆಗಳ ಕುರಿತು ಭಯಪಡುವ ಬದಲು, ತಜ್ಞ ವೈದ್ಯರಿಂದ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ.
ಬಿಪಿ ಹಾಗೂ ಸಕ್ಕರೆ ಕಾಯಿಲೆಯ ಬಗ್ಗೆ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ನಿಯಮಿತ ತಪಾಸಣೆ ಮಾಡಿಸಿಕೊಂಡು, ವೈದ್ಯರ ಸಲಹೆಯಂತೆ ಸೂಕ್ತ ಚಿಕಿತ್ಸೆ ಹಾಗೂ ಜೀವನಶೈಲಿ ಬದಲಾವಣೆಗಳನ್ನು ಅಳವಡಿಸಿಕೊಳ್ಳುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದರು.
ರೋಟರಿ ಕ್ಲಬ್ ಅಧ್ಯಕ್ಷ ರವೀಂದ್ರ ಬಲ್ಲಾಳ್ ಮಾತನಾಡಿ, ಸಮಾಜದ ಸುರಕ್ಷತೆ ಹಾಗೂ ಜನರ ಆರೋಗ್ಯ ಸಾರ್ವಜನಿಕ ಜೀವನದಲ್ಲಿ ಅತ್ಯಂತ ಮಹತ್ವದ್ದಾಗಿದೆ. ಹೃದಯ ಆರೋಗ್ಯದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಇಂತಹ ಆರೋಗ್ಯ ಶಿಬಿರಗಳು ಅಗತ್ಯವಾಗಿವೆ ಎಂದು ಹೇಳಿದರು.
ಸಾರ್ವಜನಿಕರಿಗೆ ಬಿಪಿ-ಶುಗರ್, ಹೃದಯ ಸಂಬಂಧಿ ತಪಾಸಣೆಗಳನ್ನು ಮಾಡಲಾಯಿತು. ನೂರಾರು ಜನರು ಭಾಗಿಯಾಗಿ ಸದುಪಯೋಗ ಪಡೆದುಕೊಂಡರು.
ಶಿಬಿರದಲ್ಲಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಂಜನಪ್ಪ, ಶಿವಮೊಗ್ಗ ಸರ್ಜಿ ಆಸ್ಪತ್ರೆಯ ಡಾ. ಲೇಖಾ, ಒಬಿಸಿ ಮೋರ್ಚಾ ಅಧ್ಯಕ್ಷ ಬುಕ್ಕಿವರೆ ರಾಜೇಶ್, ಮಹಾಶಕ್ತಿ ಕೇಂದ್ರ ಅಧ್ಯಕ್ಷ ಸುಂದ್ರೇಶ್, ಪ್ರಧಾನ ಕಾರ್ಯದರ್ಶಿ ಜಿ. ಡಿ ಮಲ್ಲಿಕಾರ್ಜುನ, ರೋಟರಿ ಕ್ಲಬ್ ಸಂಸ್ಥಾಪಕ ಅಧ್ಯಕ್ಷ ಎಂ.ಬಿ. ಲಕ್ಷ್ಮಣಗೌಡ, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಬ್ಬಾರ್ ಸೇರಿದಂತೆ ವಿವಿಧ ಮುಖಂಡರು ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
















Leave a Reply