
ಶಿವಮೊಗ್ಗ: ಪತ್ನಿಗೆ ಹೆಚ್ಚಿನ ವರದಕ್ಷಿಣೆ ತರುವಂತೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಿ ಜೀವ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಪತಿಗೆ ಮೂರು ವರ್ಷ ಸಾದಾ ಶಿಕ್ಷೆ ಹಾಗೂ ₹15 ಸಾವಿರ ದಂಡ ವಿಧಿಸಿ ಶಿವಮೊಗ್ಗದ ಎರಡನೇ ಜೆಎಂಎಫ್ಸಿ ನ್ಯಾಯಾಲಯ ತೀರ್ಪು ನೀಡಿದೆ.
ಬಳ್ಳಾರಿ ಜಿಲ್ಲೆಯ ಕೊಟ್ಟೂರು ನಿವಾಸಿ ಮಂಜುನಾಥ್ ಶಿಕ್ಷೆಗೆ ಗುರಿಯಾದ ಆರೋಪಿ.
ಪ್ರಕರಣದ ವಿವರದಂತೆ, ಆರೋಪಿ ತನ್ನ ಪತ್ನಿಯಿಂದ ಹೆಚ್ಚಿನ ವರದಕ್ಷಿಣೆ, ನಿವೇಶನ ಹಾಗೂ ಬಂಗಾರ ತರುವಂತೆ ಒತ್ತಾಯಿಸಿ ನಿರಂತರವಾಗಿ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿದ್ದಲ್ಲದೆ, ಜೀವ ಬೆದರಿಕೆಯನ್ನೂ ಹಾಕಿದ್ದ. ಈ ಸಂಬಂಧ 2017ರಲ್ಲಿ ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆಯನ್ನು ಅಂದಿನ ತನಿಖಾಧಿಕಾರಿ ಪ್ರಭಾವತಿ ನಡೆಸಿ, 2018ರಲ್ಲಿ ನ್ಯಾಯಾಲಯಕ್ಕೆ ದೋಷಾರೋಪಣಾ (ಚಾರ್ಜ್ಶೀಟ್) ಸಲ್ಲಿಸಿದ್ದರು.
ಪ್ರಕರಣದಲ್ಲಿ ಸಾಕ್ಷಿಗಳ ವಿಚಾರಣೆ ಹಾಗೂ ಎರಡೂ ಕಡೆಯ ವಾದ-ಪ್ರತಿವಾದ ಆಲಿಸಿದ ಬಳಿಕ, ಆರೋಪಿ ವಿರುದ್ಧ ಆರೋಪ ಸಾಬೀತಾಗಿದೆ ಎಂದು ಕಂಡ ನ್ಯಾಯಾಧೀಶ ಎನ್.ಕೆ. ಸಿದ್ದರಾಜು ಅವರು ಮಂಜುನಾಥ್ಗೆ ಮೂರು ವರ್ಷ ಸಾದಾ ಶಿಕ್ಷೆ ಹಾಗೂ ₹15 ಸಾವಿರ ದಂಡ ವಿಧಿಸಿ ಆದೇಶಿಸಿದ್ದಾರೆ.
ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕ ಜಿ.ಕೆ. ಕಿರಣ್ ಕುಮಾರ್ ವಾದ ಮಂಡಿಸಿದರು.

















Leave a Reply